ಕುಂದಾಪುರ: ಮೊಳಹಳ್ಳಿ ದಿನೇಶ್ ಹೆಗ್ಡೆ ಜಯರತ್ನ ಟ್ರಸ್ಟ್ (ರಿ) ಮೊಳಹಳ್ಳಿ ವತಿಯಿಂದ ರಾಜ್ಯಮಟ್ಟದಲ್ಲಿ ಶೈಕ್ಷಣಿಕ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ರಾಜ್ಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಗೌರವ ಸನ್ಮಾನ, ಮೊಳಹಳ್ಳಿ ಗ್ರಾಮದ ವಿಶಿಷ್ಟ ಶೈಕ್ಷಣಿಕ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಹಾಗೂ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್‌ಬುಕ್ ವಿತರಣಾ ಕಾರ್ಯಕ್ರಮವು ಬಿದ್ಕಲ್‌ಕಟ್ಟೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ (ಪ್ರೌಢಶಾಲಾ ವಿಭಾಗ)ದಲ್ಲಿ ವಿಜೃಂಭಣೆಯಿಂದ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಟ್ರಸ್ಟ್‌ನ ಸಂಸ್ಥಾಪಕ ಮೊಳಹಳ್ಳಿ ದಿನೇಶ್ ಹೆಗ್ಡೆ ವಹಿಸಿದ್ದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ನಿವೃತ್ತ ಪ್ರಾಂಶುಪಾಲ ಎಂ. ಬಾಲಕೃಷ್ಣ ಶೆಟ್ಟಿ ಮಾತನಾಡಿ, ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್‌ಬುಕ್ ಹಾಗೂ ವಿದ್ಯಾರ್ಥಿವೇತನ ವಿತರಿಸುವ ಮೂಲಕ ಟ್ರಸ್ಟ್ ಶಿಕ್ಷಣ ಕ್ಷೇತ್ರಕ್ಕೆ ಅಮೂಲ್ಯ ಕೊಡುಗೆ ನೀಡುತ್ತಿದೆ ಎಂದು ಶ್ಲಾಘಿಸಿದರು. ವಿದ್ಯಾರ್ಥಿಗಳು ತಮ್ಮ ಸಾಧನೆಯ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು ಎಂದು ಅವರು ಕರೆ ನೀಡಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಟ್ರಸ್ಟಿ ಸಂತೋಷ ಕಾಂಚನ್, ಟ್ರಸ್ಟ್ ವತಿಯಿಂದ ಶಿಕ್ಷಣ, ಆರೋಗ್ಯ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಕೈಗೊಂಡಿರುವ ವಿವಿಧ ಸೇವಾ ಚಟುವಟಿಕೆಗಳ ಕುರಿತು ವಿವರಿಸಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ ಮಾತನಾಡಿ, ಮೊಳಹಳ್ಳಿ ದಿನೇಶ್ ಹೆಗ್ಡೆಯವರು ಯಾವುದೇ ಅಪೇಕ್ಷೆಯಿಲ್ಲದೆ ಸಮಾಜಮುಖಿ ಕಾರ್ಯಗಳನ್ನು ಕೈಗೊಳ್ಳುತ್ತಿದ್ದು, ವಿಶೇಷವಾಗಿ ಸರ್ಕಾರಿ ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಮತ್ತು ಮಾನಸಿಕ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ ಎಂದರು.
ನಿವೃತ್ತ ತೋಟಗಾರಿಕಾ ಇಲಾಖೆ ನಿರ್ದೇಶಕ ಜಯಶೀಲ ಶೆಟ್ಟಿ ಟ್ರಸ್ಟ್‌ನ ಕಾರ್ಯಚಟುವಟಿಕೆಗಳ ಸಂಚಿಕೆಯನ್ನು ಅನಾವರಣಗೊಳಿಸಿ ಮಾತನಾಡಿ, ಆರಂಭದಿಂದಲೂ ನಿಸ್ವಾರ್ಥ ಸೇವೆಯಲ್ಲಿ ತೊಡಗಿಸಿಕೊಂಡಿರುವ ಜಯರತ್ನ ಟ್ರಸ್ಟ್ ಇಂದು ಸಾವಿರಾರು ಜನರಿಗೆ ನೆರವಾಗುವ ಹೆಮ್ಮರವಾಗಿ ಬೆಳೆದಿದ್ದು, ಮೊಳಹಳ್ಳಿ ಗ್ರಾಮಕ್ಕೆ ಕೀರ್ತಿ ತಂದಿದೆ ಎಂದು ಹೇಳಿದರು.


ಅತಿಥಿಗಳಾಗಿ ಭಾಗವಹಿಸಿದ್ದ ಕರ್ನಾಟಕ ಪಬ್ಲಿಕ್ ಸ್ಕೂಲ್ ಬಿದ್ಕಲ್‌ಕಟ್ಟೆಯ ಪ್ರಾಂಶುಪಾಲ ವಿಘ್ನೇಶ್ವರ ಭಟ್ ಬಿ, ಟ್ರಸ್ಟ್‌ನ ಸಮಾಜಮುಖಿ ಕಾರ್ಯಗಳು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ ಎಂದು ಅಭಿಪ್ರಾಯಪಟ್ಟರು. ಉಪಪ್ರಾಂಶುಪಾಲ ಕರುಣಾಕರ ಶೆಟ್ಟಿ ಶಾಲೆಗೆ ಟ್ರಸ್ಟ್‌ನಿಂದ ದೊರೆತಿರುವ ವಿವಿಧ ಸವಲತ್ತುಗಳನ್ನು ಸ್ಮರಿಸಿ ಕೃತಜ್ಞತೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಒಟ್ಟು 30 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಪ್ರೀತಂ ಪೂಜಾರಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ತೃತೀಯ ಸ್ಥಾನ ಗಳಿಸಿದ ಕುಮಾರಿ ಮಾನ್ಯ ಅವರಿಗೆ ತಲಾ ₹25,000 ನಗದು ಬಹುಮಾನ ನೀಡಿ ಸನ್ಮಾನಿಸಲಾಯಿತು. ರಾಜ್ಯ ಮಟ್ಟದ ಕ್ರೀಡಾಕೂಟಗಳಲ್ಲಿ ಸಾಧನೆಗೈದ ಕ್ರೀಡಾಪಟು ಗೌರವ್ ಅವರನ್ನೂ ವಿಶೇಷವಾಗಿ ಗೌರವಿಸಲಾಯಿತು.
Also Read: ಹುಬ್ಬಳ್ಳಿ-ಧಾರವಾಡ ಬಂಟರ ಸಂಘದ 2026-28 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ
ಕಾರ್ಯಕ್ರಮದಲ್ಲಿ ಎಂ. ಮಹೇಶ್ ಹೆಗ್ಡೆ (ಚೇರ್ಮನ್, ಎಕ್ಸಲೆಂಟ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್), ಶಾಲೆಯ ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿ, ವಿದ್ಯಾರ್ಥಿಗಳು, ಪೋಷಕರು ಹಾಗೂ ಫಲಾನುಭವಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಿಕ್ಷಕ ಗಣೇಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಗಿರೀಶ್ ಎಂ.ಎನ್. ಸ್ವಾಗತಿಸಿದರು ಹಾಗೂ ಪದವೀಧರ ಶಿಕ್ಷಕ ಆದರ್ಶ ವಂದನಾರ್ಪಣೆ ಸಲ್ಲಿಸಿದರು.



