ಕುಂದಾಪುರ, ಆಗಸ್ಟ್ 23: ವಿದ್ಯಾರ್ಥಿನಿಯರು ಶೈಕ್ಷಣಿಕ ಸಾಧನೆಯ ಜೊತೆಗೆ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೂ ಹೆಚ್ಚಿನ ಆದ್ಯತೆ ನೀಡಬೇಕು. ವಿಶೇಷವಾಗಿ ಹಾಸ್ಟೆಲ್ನಲ್ಲಿ ವಾಸಿಸುವ ವಿದ್ಯಾರ್ಥಿನಿಯರು ವೈಯಕ್ತಿಕ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದು ಅತ್ಯಂತ ಮುಖ್ಯ ಎಂದು ಕರ್ನಾಟಕ ಸರ್ಕಾರದ ಎನ್.ಆರ್.ಸಿ ವೈದ್ಯಕೀಯ ಅಧಿಕಾರಿ ಡಾ. ಧನ್ಯಾ ಎನ್. ಹೆಗ್ಡೆ ಹೇಳಿದರು.
ಸುಜ್ಞಾನ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗಾಗಿ ಆಯೋಜಿಸಲಾಗಿದ್ದ ಆರೋಗ್ಯ, ವೈಯಕ್ತಿಕ ಸ್ವಚ್ಛತೆ ಹಾಗೂ ಋತುಚಕ್ರದ ವೈಜ್ಞಾನಿಕ ನಿರ್ವಹಣಾ ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ದೇಹವನ್ನು ದೇಗುಲದಂತೆ ಸ್ವಚ್ಛವಾಗಿಟ್ಟುಕೊಳ್ಳಬೇಕು. ಉತ್ತಮ ದೈಹಿಕ ಮತ್ತು ಮಾನಸಿಕ ಆರೋಗ್ಯವೇ ಜೀವನದ ನಿಜವಾದ ಆಸ್ತಿ. ಸಮಯಕ್ಕೆ ಸರಿಯಾಗಿ ನಿದ್ರೆ ಮಾಡುವುದು, ಪೌಷ್ಟಿಕ ಆಹಾರ ಸೇವಿಸುವುದು ಹಾಗೂ ಸಾಕಷ್ಟು ನೀರು ಕುಡಿಯುವುದು ಆರೋಗ್ಯದ ಜೊತೆಗೆ ಮಾನಸಿಕ ಮತ್ತು ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ ಎಂದು ಅವರು ತಿಳಿಸಿದರು.
ಋತುಚಕ್ರದ ಸಂದರ್ಭದಲ್ಲಿ ವಿದ್ಯಾರ್ಥಿನಿಯರು ಸ್ವಚ್ಛತೆ ಮತ್ತು ಆರೋಗ್ಯದ ಬಗ್ಗೆ ವಿಶೇಷ ಗಮನ ಹರಿಸಬೇಕು. ಸ್ಯಾನಿಟರಿ ಪ್ಯಾಡ್ಗಳನ್ನು ನಿಯಮಿತವಾಗಿ ಬದಲಾಯಿಸುವುದು, ಒಳ ಉಡುಪುಗಳ ಸ್ವಚ್ಛತೆ ಕಾಪಾಡಿಕೊಳ್ಳುವುದು ಸೇರಿದಂತೆ ಅಗತ್ಯ ಮುನ್ನೆಚ್ಚರಿಕೆಗಳನ್ನು ವಹಿಸುವುದರಿಂದ ಸೋಂಕುಗಳು ಹಾಗೂ ಇತರ ಆರೋಗ್ಯ ಸಮಸ್ಯೆಗಳನ್ನು ತಡೆಯಬಹುದು ಎಂದು ಡಾ. ಧನ್ಯಾ ಹೆಗ್ಡೆ ವೈಜ್ಞಾನಿಕ ಮಾಹಿತಿ ನೀಡಿದರು.
ವೈಯಕ್ತಿಕ ವಸ್ತುಗಳನ್ನು ಇತರರೊಂದಿಗೆ ಹಂಚಿಕೊಳ್ಳದೆ ಸ್ವಚ್ಛವಾಗಿ ಇಟ್ಟುಕೊಳ್ಳುವುದು ಹಾಗೂ ಮಾನಸಿಕ ಒತ್ತಡವನ್ನು ಸಮರ್ಪಕವಾಗಿ ನಿರ್ವಹಿಸುವುದು ಆರೋಗ್ಯಕರ ಜೀವನಶೈಲಿಯ ಪ್ರಮುಖ ಭಾಗವಾಗಿದೆ. ವಿದ್ಯಾರ್ಥಿನಿಯರು ಆರೋಗ್ಯದ ಬಗ್ಗೆ ಯಾವುದೇ ಅನುಮಾನಗಳಿದ್ದರೂ ಮುಕ್ತವಾಗಿ ವೈದ್ಯಕೀಯ ಸಲಹೆ ಪಡೆಯಬೇಕು ಎಂದು ಅವರು ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸುಜ್ಞಾನ ಎಜುಕೇಶನಲ್ ಟ್ರಸ್ಟ್ನ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ ಮಾತನಾಡಿ, ಪಠ್ಯಪುಸ್ತಕದ ಜ್ಞಾನ ಮಾತ್ರ ವಿದ್ಯಾರ್ಥಿಗಳ ಸಂಪೂರ್ಣ ವ್ಯಕ್ತಿತ್ವ ನಿರ್ಮಾಣಕ್ಕೆ ಸಾಕಾಗುವುದಿಲ್ಲ. ವಿದ್ಯಾರ್ಥಿಗಳ ಸರ್ವಾಂಗೀಣ ವಿಕಾಸಕ್ಕೆ ಇಂತಹ ಜಾಗೃತಿ ಕಾರ್ಯಕ್ರಮಗಳು ಪೂರಕವಾಗಿವೆ ಎಂದರು.
ವಿವಿಧ ಕ್ಷೇತ್ರಗಳ ಅನುಭವಿ ಸಂಪನ್ಮೂಲ ವ್ಯಕ್ತಿಗಳ ಮಾರ್ಗದರ್ಶನ ವಿದ್ಯಾರ್ಥಿಗಳಲ್ಲಿ ಹೊಸ ಭರವಸೆ ಹಾಗೂ ದೊಡ್ಡ ಕನಸುಗಳನ್ನು ಬೆಳೆಸಲು ಸಹಕಾರಿಯಾಗುತ್ತದೆ. ಈ ಉದ್ದೇಶದಿಂದ ಸಂಸ್ಥೆಯಲ್ಲಿ ಆಗಾಗ್ಗೆ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ಸಂಸ್ಥೆಯ ಖಜಾಂಚಿ ಭರತ್ ಶೆಟ್ಟಿ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಆರೋಗ್ಯ ನಿರ್ವಹಣೆ ಅತ್ಯಂತ ಮುಖ್ಯ. ದೈನಂದಿನ ಜೀವನದಲ್ಲಿ ನೈರ್ಮಲ್ಯ ಮತ್ತು ಸ್ವಚ್ಛತೆಯನ್ನು ಅಭ್ಯಾಸವನ್ನಾಗಿ ಮಾಡಿಕೊಂಡಾಗ ಮಾತ್ರ ವಿದ್ಯಾಭ್ಯಾಸದತ್ತ ಸಂಪೂರ್ಣ ಗಮನ ಹರಿಸಲು ಸಾಧ್ಯ ಎಂದರು.
ಕಾರ್ಯಕ್ರಮದಲ್ಲಿ ಸುಜ್ಞಾನ ಪಿಯು ಕಾಲೇಜಿನ ಪ್ರಾಂಶುಪಾಲ ರಂಜನ್ ಬಿ. ಶೆಟ್ಟಿ, ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ಪ್ರದೀಪ್, ವಿದ್ಯಾರಣ್ಯ ಗ್ಲೋಬಲ್ ಶಾಲೆಯ ಪ್ರಾಂಶುಪಾಲೆ ಅನಿತಾ ಕುಮಾರಿ ಹಾಗೂ ಉಪಪ್ರಾಂಶುಪಾಲೆ ಸ್ಪೂರ್ತಿ ಎ. ಉಪಸ್ಥಿತರಿದ್ದರು. ಇಂಗ್ಲಿಷ್ ವಿಭಾಗದ ಮುಖ್ಯಸ್ಥ ವಿನಯ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.


